ಭಟ್ಕಳ: ರಾಜ್ಯದಲ್ಲಿ ಈ ಬಾರಿ ಕಾಂಗ್ರೇಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಉತ್ತರಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಮಾಜಿ ಸಚಿವಾ ಹಾಗೂ ಹಳಿಯಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ ಹೇಳಿದರು.
ಅವರು ಶುಕ್ರವಾರ ರಾತ್ರಿ ಬಿನಾವೈದ್ಯ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಂಕಾಳ್ ಎಸ್.ವೈದ್ಯರ ಪರ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂಧಿಸುತ್ತಿಲ್ಲ. ಭಟ್ಕಳ ಸೇರಿದಂತೆ ಉ.ಕ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಇದ್ದು ಅದನ್ನು ಬಗೆಹರಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು.
ನಾಮಧಾರಿ ಸಮಾಜದ ಹಿರಿಯ ಮುಖಂಡ ಎಲ್.ಎಸ್.ನಾಯ್ಕ ಮಾತನಾಡಿ, ಮಾಂಕಾಳ್ ವೈದ್ಯ ನುಡಿದಂತೆ ನಡೆಯುವ ವ್ಯಕ್ತಿ. ಅವರು ಸುಳ್ಳು ಹೇಳುವುದಿಲ್ಲ. ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಮಾಂಕಾಳ್ ವೈದ್ಯರ ಕೊಡುಗೆಯನ್ನು ಬಡಜನರು ಸ್ಮರಿಸುತ್ತಿದ್ದಾರೆ. ಇದು ನಮ್ಮ ಕ್ಷೇತ್ರಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಹೊನ್ನಾವರ ತಾಲೂಕಿನ ಜಲವಳ್ಳಿ ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಗೊಂಡಾ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಾಜಿ ಶಾಸಕ ಜೆ.ಡಿ.ನಾಯ್ಕ, ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ, ಕಾಂಗ್ರೇಸ್ ಮುಖಂಡ ರಾಮಾ ಮೊಗೇರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.