ಧಾರವಾಡ : ಕಾನೂನು ಕುರಿತು ಹೆಚ್ಚಿನ ಜಾಗೃತಿ ಆದಾಗಲೇ ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಲು ಸಾಧ್ಯ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೊಗದೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಉಮೇಶ ಎಂ. ಅಡಿಗ ತಿಳಿಸಿದರು.
ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕೋರ್ಟ ಹಾಲ್ನಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದ್ವೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ ಮತ್ತು ಜೂನ್ ತಿಂಗಳಲ್ಲಿ ಜರುಗುವ ಅಂತಾರಾಷ್ಟ್ರೀಯ ಕಾರ್ಮಿಕರ ದಿನ. ಪರಿಸರ ದಿನಾಚರಣೆ, ಬಾಲ ಕಾರ್ಮಿಕರ ದಿನ ಕಾರ್ಯಕ್ರಮಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳಡಿ ಅನುದಾನ ಸೌಲಭ್ಯಗಳಿವೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ದೊರೆಯುವಂತಾಗಬೇಕು. ಇದಕ್ಕಾಗಿ ನೊಂದಣಿಯಾಗಿರುವ ಕಟ್ಟಡ ಕಾರ್ಮಿಕರ ಪಟ್ಟಿಯನ್ನು ಪರಿಶೀಲಿಸುವ ಕಾರ್ಯವಾಗಬೇಕು ಎಂದರು.
ಜೂನ್ 25 ರಂದು ರಾಷ್ಟ್ರೀಯ ಲೋಕ ಅದಾಲತ್ನ್ನು ನಡೆಸಲಾಗುತ್ತಿದ್ದು ಇದಕ್ಕೆ ವ್ಯಾಪಕ ಪ್ರಚಾರ ನೀಡಬೇಕು. ಲೋಕ ಅದಾಲತ್ಲ್ಲಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವುದರಿಂದ ಸಮಯ ಮತ್ತು ಹಣದ ಉಳಿತಾಯವಾಗುತ್ತದೆ. ಆದ್ದರಿಂದ ಜಿಲ್ಲಾಡಳಿತ ಭೂಸ್ವಾಧೀನ ಪರಿಹಾರದ ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಬಗೆಹರಿಸುವತ್ತ ಗಮನ ನೀಡಬೇಕು ಇದರಿಂದ ಸರ್ಕಾರ ಬಡ್ಡಿ ಕಟ್ಟುವುದು ತಪ್ಪುವುದಲ್ಲದೇ ಭೂಮಿ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ಪಡೆಯಲು ಅನೂಕೂಲವಾಗಲಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಂ ಮಾತನಾಡಿ, ಮಹಿಳಾ ದೌರ್ಜನ್ಯ ವಿಷಯವನ್ನು ಮಾರ್ಚ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ, ಪ್ರತಿವಾರವು ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಗೆ ಒತ್ತುಕೊಟ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಪ್ರತಿ ತಿಂಗಳ ಮೂರನೇ ಶನಿವಾರದಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅಂದು ಜಲ್ಲಾಧಿಕಾರಿ ಹಾಗೂ ಇತರ ತಾಲೂಕಿನಲ್ಲಿ ಆಯಾ ತಾಲೂಕಿನ ತಹಶೀಲ್ದಾರರು ಆಯ್ಕೆ ಮಾಡಿಕೊಂಡಂತಹ ಗ್ರಾಮಗಳಲ್ಲಿನ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿ ಅಲ್ಲೇ ಪರಿಹಾರ ನೀಡುವ ಕ್ರಮಕೈಗೊಳ್ಳಲಾಗುತ್ತಿದೆ ಮುಂದಿನ ಗ್ರಾಮ ವಾಸ್ತವ್ಯದ ಕಾರ್ಯಕ್ರಮಗಳಲ್ಲಿ ವಿವಿಧ ಯೋಜನೆ
ಮತ್ತು ಕಾನೂನು ಅರಿವು ಮೂಡಿಸುವ ಜಾಗೃತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ಹುಬ್ಬಳ್ಳಿ-ಧಾರವಾಡ ಪೆÇಲೀಸ್ ಆಯುಕ್ತ ಲಾಬೂರಾಮ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ.ಬಿ, ಡಿಸಿಎಫ್ ಸೋನಲ್ ವೃಷ್ಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.