ಉಡುಪಿ, ಅ.೨೭: ಹಂದಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಮ್ರಗೋಡು- ಬೆಣ್ಣೆಕುದ್ರುವಿನ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಅರ್ಧದಲ್ಲೇ ಸ್ಥಗಿತಗೊಂಡಿರುವ ನೀರಿನ ಟ್ಯಾಂಕಿಯ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಆಗ್ರಹಿಸಿ ಸ್ಥಳೀಯ ಸ್ತ್ರೀಶಕ್ತಿ ಸಂಘಟನೆಗಳು ಉಡುಪಿ ಜಿಲ್ಲಾಪಂಚಾಯತ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದವು.
ಹಂದಾಡಿ, ಕುಮ್ರಗೋಡು, ಬೆಣ್ಣೆಕುದ್ರು, ಬಾರಕೂರು ಗ್ರಾಮಗಳ ಸ್ತ್ರೀಶಕ್ತಿ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತಮ್ಮ ಬೇಡಿಕೆ ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ಈ ಬಗ್ಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಕುಮಾರ್ ಹಾಗೂ ಜಿಲ್ಲಾಧಿಕಾರಿ ಪಿ.ಹೇಮಲತಾರಿಗೆ ಮನವಿಯನ್ನು ಸಲ್ಲಿಸಲಾಯಿತು.
ದ್ವೀಪವಾಗಿರುವ ಬೆಣ್ಣೆಕುದ್ರು ಪ್ರದೇಶದ ಜನತೆ ಹಲವು ವರ್ಷಗಳಿಂದ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಮೂರು ವರ್ಷಗಳ ಹಿಂದೆ ಇಲ್ಲಿ ನೀರಿನ ಟ್ಯಾಂಕಿ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯತ್ ಅನುದಾನ ಮಂಜೂರು ಮಾಡಿತ್ತು. ಅದರಂತೆ ಟ್ಯಾಂಕಿ ನಿರ್ಮಾಣದ ಕಾರ್ಯ ಆರಂಭಗೊಂಡರೂ ಈವರೆಗೆ ಅದು ಪೂರ್ಣಗೊಳ್ಳದೆ ಅರ್ಧದಲ್ಲೇ ಸ್ಥಗಿತಗೊಂಡಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಇದು ಸ್ಥಳೀಯರ ಅನುಮಾನ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು. ಅಲ್ಲದೆ ಟ್ಯಾಂಕಿ ನಿರ್ಮಾಣದ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಉಡುಪಿ ತಾಪಂ ಸದಸ್ಯ ಸತೀಶ್ ಪೂಜಾರಿ, ಸ್ತ್ರೀಶಕ್ತಿ ಸಂಘಟನೆಗಳ ಪದಾಧಿಕಾರಿಗಳಾದ ಗಿರಿಜಾ, ಕಮಲ, ಜಯಂತಿ, ರಾಧಿಕಾ, ಲೂವಿಜ, ಮೇರಿ, ಗುಲಾಬಿ, ರತ್ನಾ, ಸುಮತಿ, ಲತಾ ಮೊದಲಾದವರು ಉಪಸ್ಥಿತರಿದ್ದರು.