ಕಾರವಾರ: ಡಿ.ಇ.ಎಲ್.ಇ.ಡಿ ಮತ್ತು ಡಿ.ಪಿ.ಎಸ್.ಇ ಪ್ರಥಮ ಹಾಗೂ ದ್ವಿತೀಯ ಪರೀಕ್ಷೆಗಳು ಜುಲೈ 4 ರಿಂದ 14 ರವರೆಗೆ ರಾಜ್ಯಾದ್ಯಂತ ನಡೆಯಲಿದ್ದು, ಪರೀಕ್ಷೆಯನ್ನು ದೋಷ ರಹಿತವಾಗಿ ನಡೆಸುವ ಅವಶ್ಯಕತೆ ಇರುತ್ತದೆ.
ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಯುವ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಡಯಟ್ ನ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾನೂನು ಬಾಹೀರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಶಾಂತವಾತಾವರಣದಲ್ಲಿ ಪರೀಕ್ಷೆ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಿ.ಆರ್.ಪಿ.ಸಿ. ಕಲಂ 144 ರನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿರುತ್ತದೆ.
ಈ ಕುರಿತು ಪೊಲೀಸ್ ಅಧೀಕ್ಷಕರು ಈ ಆದೇಶವನ್ನು ಜಾರಿಗೆ ತರುವ ಬಗ್ಗೆ ಕ್ರಮ ಜರುಗಿಸಬೇಕೆಂದು ತಿಳಿಸಿದ್ದಾರೆ.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷೆ ನಡೆಯುವ ಸಮಯದಿಂದ ಪರೀಕ್ಷಾ ಅವಧಿ ಮುಕ್ತಾಯವಾಗುವವರೆಗೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ಸಭೆ ಸಮಾರಂಭಗಳನ್ನು ಹಾಗೂ ಧ್ವನಿವರ್ಧಕಗಳನ್ನು ಬಳಸದಂತೆ ಮತ್ತು ಝೆರಾಕ್ಸ್ ಅಂಗಡಿ, ಸೈಬರ್ ಕೆಫೆಗಳನ್ನು ಪರೀಕ್ಷಾವಧಿಯಲ್ಲಿ ಮುಚ್ಚುವಂತೆ ಆದೇಶ ನೀಡಲಾಗಿದ್ದು, ಸಾರ್ವಜನಿಕರು ಪರೀಕ್ಷೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.