ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಾನವ ಕಳ್ಳಸಾಗಾಣಿಕೆಯನ್ನು ತಡೆಗಟ್ಟಲು ಶ್ರಮಿಸಿ: ನ್ಯಾ. ಬಾಳಪ್ಪ ಅಪ್ಪಣ್ಣ ಜರಗು

ಮಾನವ ಕಳ್ಳಸಾಗಾಣಿಕೆಯನ್ನು ತಡೆಗಟ್ಟಲು ಶ್ರಮಿಸಿ: ನ್ಯಾ. ಬಾಳಪ್ಪ ಅಪ್ಪಣ್ಣ ಜರಗು

Sun, 31 Jul 2022 01:28:04  Office Staff   SO News

ಚಿಕ್ಕಬಳ್ಳಾಪುರ : ಮಾನವ ಕಳ್ಳಸಾಗಾಣಿಕೆಯು ಸಮಾಜದ ಒಂದು ಪಿಡುಗಾಗಿದ್ದು, ಸಮಾಜದಲ್ಲಿರುವ  ನಾಗರೀಕರು ತಮ್ಮ ಕರ್ತವ್ಯವನ್ನು ನಿಭಾಯಿಸಿದಾಗ  ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಲು ಸಾಧ್ಯ ಎಂದು ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯನ್ಯಾಯಿಕ ದಂಡಾಧಿಕಾರಿಗಳಾದ ಬಾಳಪ್ಪ ಅಪ್ಪಣ್ಣ ಜರಗು ಅವರು ತಿಳಿಸಿದರು.

ಶನಿವಾರ ಜಿಲ್ಲಾ ಪಂಚಾಯತ್ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಪ್ರಯುಕ್ತ “ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಕಾನೂನು ಅರಿವು” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮಾನವ ಕಳ್ಳ ಸಾಗಾಣಿಕೆಯನ್ನು ತೊಡೆದು ಹಾಕಿ ನೀರ್ಭಿತ ಸಮಾಜವನ್ನು ನಿರ್ಮಿಸಬೇಕು. ಮಹಿಳೆಯರು, ಮಕ್ಕಳು ಹಾಗೂ ದುರ್ಬಲವರ್ಗದವರಿಗೆ ವಿವಿಧ ಆಮಿಷಗಳನ್ನು ಒಡ್ಡಿ ಅವರನ್ನು ಸುಲಭವಾಗಿ ಮೋಸದ ಬಲೆಗೆ ಬೀಳಿಸುವ ಪ್ರಯತ್ನ ಮಾಡುತ್ತಿರುವವರು ಕಂಡು ಬಂದಾಗ ಕೂಡಲೇ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಅವರು ಮಾತನಾಡುತ್ತಾ, ಅಶಕ್ತ ಮಹಿಳೆಯರು ಮತ್ತು ಮಕ್ಕಳ ಹೆಚ್ಚು ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಬಡ ಮಕ್ಕಳು ಸಮಾಜದ ಅನೈತಿಕ ಚಟುವಟಿಕೆಗಳಿಗೆ ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ  ಜಾಗೃತಿ ಮೂಡಿಸುವ ಕಾರ್ಯ ಚಟುವಟಿಕೆಗಳನ್ನು ಮತ್ತಷ್ಟು ಚುರುಕಗೊಳಿಸಬೇಕು. ಪೋಷಕರು ತಮ್ಮ ಮಕ್ಕಳ ಬಗ್ಗೆ ಗಮನವಹಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದರು.    

ಪ್ರಸ್ತುತ ಸಾಮಾಜಿಕ ಜಾಲತಾಣಗಳ ಮಹಿಳೆಯರು ಮತ್ತು ಮಕ್ಕಳು ಎಚ್ಚರಿಕೆ ವಹಿಸಬೇಕು. ಯಾವುದೇ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದು. ಅಪರಿಚಿತ ವ್ಯಕ್ತಿಗಳಿಂದ ಸಂದೇಶಗಳು ಬಂದಲ್ಲಿ ಕೂಡಲೇ ಪೋಷಕರಿಗೆ ತಿಳಿಸಬೇಕು. ಯುವತಿಯರು  ಉನ್ನತ ಶಿಕ್ಷಣವನ್ನು ಪಡೆದುಕೊಂಡು ಆರ್ಥಿಕವಾಗಿ ಹೆಚ್ಚು ಸಬಲರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್ ಅವರು ಮಾತನಾಡುತ್ತಾ, ಮಹಿಳೆಯರು ಮತ್ತು ಮಕ್ಕಳ ದುರ್ಬಲತೆಯನ್ನು ಅರಿತು ಉದ್ಯೋಗ ಕೊಡಿಸುವ ನೆಪದಲ್ಲಿ ವಿದೇಶಗಳಿಗೆ ಮಾನವ ಕಳ್ಳ ಸಾಗಾಣಿಕೆಯನ್ನು ಮಾಡುವಂತಹ ಘಟನೆಗಳು ಕಂಡು ಬಂದಲ್ಲಿ  ಕೂಡಲೇ ಮಕ್ಕಳ ಸಹಾಯವಾಣಿ 1098 ಗೆ ಹಾಗೂ ಪೊಲೀಸ್ ಇಲಾಖೆಯ ಸಹಾಯವಾಣಿ 112 ಗೆ ಕರೆ ಮಾಡಿ ತಕ್ಷಣ ತಿಳಿಸಬೇಕು ಎಂದರು.

ಮಾನವ ಕಳ್ಳ ಸಾಗಣಿಕೆಯನ್ನು ತಡೆಯಲು ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಸರ್ಕಾರ ಹಲವಾರು ಕಾನೂನುಗಳನ್ನು ರೂಪಿಸಲಾಗಿದೆ. ಅವುಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಜೊತೆಗೆ ಸಂಬಂಧಪಟ್ಟ ಇಲಾಖೆಗಳು   ಕಾನೂನು ಕಾಯ್ದೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು. 

ಗೌರವಾನ್ವಿತ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಪ್ರಸಾದ್  ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಅಶ್ವತ್ಥಮ್ಮ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರಾಮರಾಜೆ ಅರಸ್, ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಧರಯ್ಯ, ಗೌರವಾನ್ವಿತ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಗಳಾದ ಅರುಣ ಕುಮಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹಮದ್ ಉಸ್ಮಾನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.


Share: