ಕಾರವಾರ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಹಾಗೂ ವಿವಿಧ ಸರಕಾರ, ಸರಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಮಾನವೀಯತೆಗಾಗಿ ಯೋಗ’’ Yoga for Humanity ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.
ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂ. 20ರಂದು ಕಾರವಾರ ನಗರದಲ್ಲಿ ವಿಶ್ವ ಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ಜಾಥಾ ನಡೆಸಲಾಗುವುದು.
ಕಾರವಾರ, ಮುರುಡೇಶ್ವರ ಹಾಗೂ ಶಿರಸಿ ಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಗಿದೆ.
ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಜೂ. 21 ರ ಬೆಳಿಗ್ಗೆ 6 ರಿಂದ 9 ಗಂಟೆಯ ವರೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರ, ಶಾಸಕಿ ರೂಪಲಿ ನಾಯ್ಕ, ನಗರ ಸಭೆ ಅಧ್ಯಕ್ಷ, ಉಪಾಧ್ಯಕ್ಷ, ಆಯುಷ್ ಇಲಾಖೆ ಆಯುಕ್ತ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಉಪ ನಿರ್ದೇಶಕ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಯೋಗಾಸಕ್ತರು, ವಿದ್ಯಾರ್ಥಿಗಳು, ನೌಕರರು ಹಾಗೂ ಮಾದ್ಯಮ ವರ್ಗದವರು ಸಕ್ರೀಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.