ಕಾರವಾರ : ನಗರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ಅಂತರರಾಷ್ಟ್ರೀಯ ಕಡಲತೀರ ಸ್ವಚ್ಚತಾ ದಿನಾಚರಣೆ ಶನಿವಾರ ನಡೆಯಿತು.
ಸ್ವಚ್ಛ ಸಾಗರ ಸುರಕ್ಷಿತ ಸಾಗರ ಘೋಷಣೆಯಡಿಯಲ್ಲಿ ಆಯೋಜಿಸಲಾದ ಕಡಲತೀರ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ
ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಚಾಲನೆ ನೀಡಿದರು.
ಬೆಳಿಗ್ಗೆ ಇಲ್ಕಿನ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ಸಮುದ್ರ ಪೂಜೆ ನಡೆಸಿದ ಬಳಿಕ ವನಮಹೋತ್ಸವದ ಪ್ರಯುಕ್ತ ಸಸಿ ನೆಟ್ಟು ನೀರುಣಿಸಿದರು. ನಂತರ ಮಯೂರವರ್ಮ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂತರರಾಷ್ಟ್ರೀಯ ಕಡಲತೀರ ಸ್ವಚ್ಚತಾ ದಿನಾಚರಣೆ, ಸ್ವಚ್ಛ ಸಾಗರ ಸುರಕ್ಷಿತ ಸಾಗರ ಹೆಸರಿನ ಕಡಲತೀರ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದ ಕುರಿತು ಮಾತನಾಡಿದರು.
ಇದೇ ವೇಳೆ ಕಡಲತೀರ ಸ್ವಚ್ಚತಾ ಶ್ರಮದಾನದಲ್ಲಿ ಪಾಲ್ಗೊಂಡು ಹೆಚ್ಚು ಕಸ ಸಂಗ್ರಹಿಸಿದ ತಂಡಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ, ನಗರಸಭೆ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶಿಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾರತ ಸರ್ಕಾರದ ಭೂವಿಜ್ಞಾನ ಸಚಿವಾಲಯದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಸಾಗರ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಕರಾವಳಿ ಕಾವಲು ಪಡೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.