ಉಡುಪಿ : ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಥಸಂಚಲನದಲ್ಲಿ ಗೌರವರಕ್ಷೆ ಸ್ವೀಕರಿಸಿ, ನಂತರ ಕನ್ನಡ ರಾಜ್ಯೋತ್ಸವ ಸಂದೇಶ ನೀಡಿದರು. ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 34 ಮಂದಿಗೆ ಹಾಗೂ ಎರಡು ಸಂಸ್ಥೆಗಳಿಗೆ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಉಸ್ತುವಾರಿ ಸಚಿವರು ವಿತರಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ. ಕ.ಸಾ.ಪ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ.ಸಿಇಓ ಪ್ರಸನ್ನ ಹೆಚ್, ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಎಡಿಸಿ ವೀಣಾ ಬಿ.ಎನ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲಿನಿಂದ ಅಜ್ಜರಕಾಡು ಮೈದಾನದವರೆಗೆ ವಿವಿಧ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಿತು. ಸಚಿವ ಅಂಗಾರ ಕನ್ನಡ ತಾಯಿ ಭುವನೇಶ್ವರಿ ಚಿತ್ರಕ್ಕೆ ಪೂಜೆ ನೆರವೇರಿಸಿ, ಮೆರವಣಿಗೆಗೆ ಹಸಿರು ನಿಶಾನೆ ತೋರಿದರು.
ಅಜ್ಜರಕಾಡು ಮೈದಾನದಲ್ಲಿ ಪೊಲೀಸ್ ಬ್ಯಾಂಡಿನೊಂದಿಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಅಗ್ನಿಶಾಮಕ ದಳ, ಎನ್.ಸಿ.ಸಿ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡದಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಭಾ ಕಾರ್ಯಕ್ರಮದ ನಂತರ ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.