ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಶಿವಮೊಗ್ಗ: ಕಿಡಿಗೇಡಿಗಳಿಂದ ಮಹಾತ್ಮಾ ಗಾಂಧೀಜಿ ಪ್ರತಿಮೆ ಧ್ವಂಸ

ಶಿವಮೊಗ್ಗ: ಕಿಡಿಗೇಡಿಗಳಿಂದ ಮಹಾತ್ಮಾ ಗಾಂಧೀಜಿ ಪ್ರತಿಮೆ ಧ್ವಂಸ

Tue, 22 Aug 2023 16:34:25  Office Staff   Vb

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ವರದಿಯಾಗಿದೆ.

ರವಿವಾರ ತಡರಾತ್ರಿ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ.

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತ್ವರಿತಗತಿಯಲ್ಲಿ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

3 ತಂಡಗಳ ರಚನೆ
ಹೊಳೆಹೊನ್ನೂರು ಪಟ್ಟಣದ ಸರ್ಕಲ್‌ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಕೆಲವು ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದಾರೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಮೂರು ತಂಡಗಳ ರಚನೆ ಮಾಡಲಾಗಿದೆ.
- ಮಿಥುನ್ ಕುಮಾರ್ ಜಿ.ಕೆ., ಎಸ್ಪಿ

ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ರಸ್ತೆ ತಡೆ; ಪೊಲೀಸರಿಂದ ಬಿಗಿ ಬಂದೋಬಸ್
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಸೋಮವಾರ ಪ್ರತಿಭಟನೆ ನಡೆಸಿ, ಹೊಳೆಹೊನ್ನೂರು ಗಾಂಧಿ ಸರ್ಕಲ್‌ ಬಳಿ ರಸ್ತೆ ತಡೆ ನಡೆಸಿದರು. ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಂದೋಬಸ್ತ್ ಕೈಗೊಳ್ಳಲಾಗಿದೆ.

ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ ಸಿಎಂ
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆ ಧ್ವಂಸಗೊಳಿಸಿರುವ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಟ್ವಿಟ್ ಮಾಡಿರುವ ಅವರು, 'ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ, ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 'ಯಾರೊಬ್ಬರೂ ಈ ಬಗ್ಗೆ ಉದ್ದೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ' ಎಂದು ಟ್ವಿಟ್ ಮಾಡಿದ್ದಾರೆ.


Share: